fbpx
ರಾಜಕೀಯ

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ ವಾಪಸ್

ಕಳೆದ 4 ದಿನಗಳಿಂದ ನಗರದ ಫ್ರೀಡಂ ಪಾರ್ಕಿನಲ್ಲಿ ನಡೆಸುತ್ತಿದ್ದ ಅಹೋರಾತ್ರಿ ಪ್ರತಿಭಟನೆಯನ್ನು ಸರ್ಕಾರದ ಭರವಸೆಯ ಮೇರೆಗೆ ಅಂಗನವಾಡಿ ಕಾರ್ಯಕರ್ತೆಯರು ವಾಪಸ್ ಪಡೆದುಕೊಂಡಿದ್ದಾರೆ.

ಇಡೀ ಮಂತ್ರಿ ಮಂಡಲ ಒಂದುದಿನ ಗೂಟದ ಕಾರು ನಿಲ್ಲಿಸಿದರೆ ಉಳಿಯುವ ಹಣದಲ್ಲಿ ಒಂದುವರ್ಷ ಆ ತಾಯಂದಿರ ಸಂಬಳ ಕೊಡಬಹುದು.

ಸ್ಥಳಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಭೇಟಿ ನೀಡಿ ಮಾತುಕತೆ ನಡೆಸಿದ ಬಳಿಕ ಪ್ರತಿಭಟನಾ ನಿರತರು ಹೋರಾಟವನ್ನು ಕೈಬಿಟ್ಟಿದ್ದಾರೆ. ಸ್ಥಳದಲ್ಲಿ ಮಾತನಾಡಿದ ಉಮಾಶ್ರೀ, ಎಲ್ಲಾ ಪದಾಧಿಕಾರಿಗಳ ಸಮ್ಮುಖದಲ್ಲಿ ಏಪ್ರಿಲ್ ರಂದು 10 ರಂದು ಸಭೆ ನಡೆಸಲಾಗುವುದು. ವೇತನ ಸೇರಿದಂತೆ ಬೇಡಿಕೆಗಳನ್ನು ಈಡೇರಿಸುವುದಾಗಿ ಸಿಎಂ ಹೇಳಿದ್ದಾರೆ. ನಾವು ನಿಮ್ಮ ಸಮಸ್ಯೆಯನ್ನು ಬಗೆಹರಿಸುತ್ತೇವೆ. ಸರ್ಕಾರದ ಮೇಲೆ ವಿಶ್ವಾಸವಿಡಿ ಎಂದು ಹೇಳಿದರು.

ಕಾರ್ಯಕರ್ತೆಯರ ಬೇಡಿಕೆ ಏನಿತ್ತು?

ರಾಜ್ಯದಲ್ಲಿ ಒಟ್ಟು 1.25 ಲಕ್ಷ ಅಂಗನವಾಡಿ ಸಿಬ್ಬಂದಿ ಇದ್ದು, ವೇತನ 7 ಸಾವಿರದಿಂದ 10 ಸಾವಿರ ರೂ. ಹೆಚ್ಚಳ ಮಾಡಬೇಕು. ಸಹಾಯಕಿಯರ ವೇತನ 3,500 ರಿಂದ 7,500 ರೂ. ಹೆಚ್ಚಳ ವಾಗಬೇಕು. ಸಹಾಯಕಿಯರಿಗೆ ಮುಂಬಡ್ತಿ, ಪಿಂಚಣಿ, ಪಿಎಫ್ ಸೌಲಭ್ಯ ನೀಡಬೇಕೆಂಬ ಬೇಡಿಕೆಯನ್ನು ಇಟ್ಟಿದ್ದರು.

ಯಾರ ಪಾಲು ಎಷ್ಟು?

ಯುಪಿಎ ಸರ್ಕಾರ ಇದ್ದಾಗ ಕೇಂದ್ರ ಸರ್ಕಾರ ಶೇ.90ರಷ್ಟು, ರಾಜ್ಯ ಸರ್ಕಾರ ಶೇ.10 ಗೌರವ ಧನ ಕೊಡುತಿತ್ತು. ಆದರೆ ಕೇಂದ್ರ ಸರ್ಕಾರ ಈಗ ಶೇ. 60, ರಾಜ್ಯ ಸರ್ಕಾರ ಶೇ.40 ರಷ್ಟು ಅನುದಾನ ನೀಡುತ್ತಿದೆ. ಹೀಗಾಗಿ ರಾಜ್ಯ ಸರ್ಕಾರ 5,200 ರೂ. ಸಹಾಯಧನ ಕೊಡ್ತಿದ್ರೆ, ಕೇಂದ್ರ ಸರ್ಕಾರದ ಪಾಲು 1,800 ರೂ. ಮಾತ್ರ. ಇದರಿಂದಾಗಿ ಒಟ್ಟು 7000 ರೂ ಸಂಬಳ ಸಿಗುತ್ತಿದೆ ಎಂದು ಕೇಂದ್ರದ ವಿರುದ್ಧ ಸಚಿವೆ ಉಮಾಶ್ರೀ ಸದನದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದರು.

ಪ್ರತಿಭಟನೆ ಯಾಕೆ?

ಇಲ್ಲಿಯವರೆಗೆ ಕಾರ್ಯಕರ್ತೆಯರಿಗೆ ಪ್ರತಿ ತಿಂಗಳು 6 ಸಾವಿರ ಮತ್ತು ಸಹಾಯಕಿಯರಿಗೆ 3 ಸಾವಿರ ರೂ. ಸಂಬಳ ಸಿಗುತಿತ್ತು. ಈ ವರ್ಷದ ಬಜೆಟ್‍ನಲ್ಲಿ ಸರ್ಕಾರ ಕಾರ್ಯಕರ್ತೆಯರಿಗೆ 1 ಸಾವಿರ ರೂ. ಮತ್ತು ಸಹಾಯಕಿಯರಿಗೆ 500 ರೂ. ಹೆಚ್ಚಳ ಮಾಡುವುದಾಗಿ ತಿಳಿಸಿದೆ. ಈ ಹೆಚ್ಚಳ ನಮಗೆ ಸಾಲುವುದಿಲ್ಲ. ಹತ್ತಿರ ರಾಜ್ಯಗಳಾದ ಕೇರಳ, ಮಹಾರಾಷ್ಟ್ರ, ತಮಿಳುನಾಡು, ಗೋವಾ ಸರ್ಕಾರಗಳು ಕಾರ್ಯಕರ್ತೆಯರಿಗೆ 10 ಸಾವಿರ ರೂ. ಸಹಾಯಕಿಯರಿಗೆ 7,500 ರೂ. ನೀಡುತ್ತಿದೆ. ಹೀಗಾಗಿ ಕರ್ನಾಟಕ ಸರ್ಕಾರವೂ ನಮಗೆ ಇಷ್ಟೇ ಸಂಬಳ ನೀಡಬೇಕೆಂದು ಆಗ್ರಹಿಸಿ ಆಹೋರಾತ್ರಿ ಪ್ರತಿಭಟನೆ ನಡೆಸಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top